ಬೆಂಗಳೂರು: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವರ್ಷವಿಡೀ ಸುವರ್ಣ ಸಂಭ್ರಮ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ 2023 ನವೆಂಬರ್ 1 ರಿಂದ 2024 ನವೆಂಬರ್ 1ರವರೆಗೆ ಕರ್ನಾಟಕ ಸಂಭ್ರಮ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ಅದರಗುಂಚಿ ಶಂಕರಗೌಡ, ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ, ಜೀಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿ ಹಲವು ಕಾರ್ಯಕ್ರಮ ರೂಪಿಸಲು ಸಭೆಯಲ್ಲಿ ತೀರ್ವನಿಸಲಾಯಿತು.
ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅ.17ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು. ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡಲು ಸಭೆ ನಿರ್ಧರಿಸಿತು.
ಐವತ್ತನೇ ವರ್ಷದ ಸಂಭ್ರಮವನ್ನು ಹಿಂದಿನ ಸರ್ಕಾರ 2022 ನ.1 ರಿಂದ 2023 ನ.1ರವರೆಗೆ ವೈಭವದಿಂದ ಆಚರಿಸಬೇಕಿತ್ತು. ಏಕೆ ಆಚರಿಸಲಿಲ್ಲ? ಈ ನಿರ್ಲಕ್ಷ್ಯ ಸರಿನಾ? ಎಂದು ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಈಗ 50 ವರ್ಷ ತುಂಬಿ 51ನೇ ವರ್ಷಕ್ಕೆ ಕಾಲಿಡಲಿದ್ದು, ಹಿಂದಿನ ಸರ್ಕಾರ ಈ ವಿಚಾರದಲ್ಲಿ ಎಡವಿದೆ ಎಂದರು.
ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳಬೇಕು. ಕರ್ನಾಟಕದ ಸಂಸ್ಕೃತಿ ಹೆಚ್ಚು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ಮುಟ್ಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮ ಆಯೋಜಿಸಿ ಎಂದು ನಿರ್ದೇಶನ ನೀಡಿದರು. ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ರ್ಚಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.