ಬೆಂಗಳೂರು- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊನೇ ಮೊಳೆ ಹೊಡೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಈ ನಿರ್ಧಾರಕ್ಕೆ ಶಿಕ್ಷಣ ತಜ್ಞರು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, “ರಾಜ್ಯ ಶಿಕ್ಷಣ ನೀತಿ”ಗೆ ಮಹತ್ವದ ಸಲಹೆಗಳನ್ನೂ ನೀಡಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
15 ಮಂದಿ ತಜ್ಞರ ಆಯೋಗವನ್ನು ರಚನೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ.
ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ಧುರಾಮಯ್ಯ ತಿಳಿಸಿದ್ದಾರೆ.