ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಬರಗಾಲ ಆವರಿಸಿದೆ. ಹಿಂಗಾರು ಮಳೆಯೂ ಸಹ ಸರಿಯಾಗಿ ಆಗುತ್ತಿಲ್ಲ. ಇದರಿಂದಾಗಿ ರೈತ ಸಂಕಷ್ಟಕ್ಕೆ ಸಿಲುಕಿದ್ದು, ಈಗಾಗಲೇ ರಾಜ್ಯ ಸರ್ಕಾರ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಮದ್ಯೆ ಇದೀಗ ಮಳೆಗಾಲದ ನಂತರ ಅವಧಿಗೂ ಮುನ್ನವೇ ಕರ್ನಾಟಕಕ್ಕೆ ಚಳಿಗಾಲ ಕಾಲಿಟ್ಟಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ. ಹಾಗೆಯೇ ಒಣಹವೆ ಕೂಡ ಮುಂದುವರೆದಿದೆ. ಚಳಿ ಜತೆ ಜತೆಗೆ ಗರಿಷ್ಠ ತಾಪಮಾನದಲ್ಲಿ ಕೂಡ ಏರಿಕೆಯಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ.
ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಿಕ್ಕನಹಳ್ಳಿಯಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಉಷ್ಣಾಂಶ ಹೆಚ್ಚಿರಲಿದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.