ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಾಮಾನ್ಯ ವರ್ಗದಿಂದ ಆಯ್ಕೆಯಾದರೂ ಸಹ ಮೀಸಲಾತಿಯಡಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕುನ್ನಾಲ ಗ್ರಾಮ ಪಂಚಾಯಿತಿ ಸದಸ್ಯ ಚೈತ್ರಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಸಾಮಾನ್ಯ ವರ್ಗದಿಂದ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದವರು ಸರ್ಕಾರ ನಿಗದಿಪಡಿಸಿದ ಮೀಸಲಾತಿ ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.
ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಸೆಕ್ಷನ್ 5ರ ಅಡಿ ಮೀಸಲು ನೀಡಲು ಅವಕಾಶವಿದೆ. ಇದರ ಅನ್ವಯ ಸಾಮಾನ್ಯ ವರ್ಗದಿಂದ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡಿ ಸೆಕ್ಷನ್ 44ರ ಅಡಿ ಮೀಸಲು ವರ್ಗದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಯಾವುದೇ ಸಮಸ್ಯೆ ಇಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.
ಗ್ರಾಮ ಪಂಚಾಯತ್ ಕಾಯ್ದೆ ಸೆಕ್ಷನ್ 5ರ ಅಡಿ ಸದಸ್ಯರ ಆಯ್ಕೆಗೆ ಒದಗಿಸಲಾದ ಮೀಸಲಾತಿಯು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರಿಗೆ ಪರಿಗಣನೆಗೆ ಬರುವುದಿಲ್ಲ. ಸೆಕ್ಷನ್ 44ರಲ್ಲಿ ಉಲ್ಲೇಖಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳಿಗೆ ಅರ್ಹರು ಇಲ್ಲದಿದ್ದಲ್ಲಿ ಜನಸಂಖ್ಯೆ ಆಧಾರದಲ್ಲಿ ಮೀಸಲು ಹುದ್ದೆಗಳನ್ನು ಇತರೆ ಜನಾಂಗದವರಿಗೆ ನೀಡಬಹುದಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಜನಸಂಖ್ಯೆಗೆ ಅನುಗುಣವಾಗಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗಳ ಭರ್ತಿ ಮಾಡಬಹುದು. ಹಾಗಾಗಿ ಸಾಮಾನ್ಯ ವರ್ಗದಿಂದ ಸದಸ್ಯರಾದರು ಮೀಸಲು ವರ್ಗದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದಾಗಿದೆ ಎಂದು ಹೈಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.